ಟಿಕೆಟ್ ಕೈ ತಪ್ಪಿದ್ದಕ್ಕೆ ಭುಗಿಲೆದ್ದ ಆಕ್ರೋಶ
ತುಮಕೂರು: ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆಯಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಮಾಜಿ ಶಾಸಕ ಶಫಿ ಅಹಮದ್ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಕಳೆದ ನಾಲ್ಕು ದಶಕಗಳಿಂದ ಶಫಿ ಅಹಮದ್ ಕುಟುಂಬಕ್ಕೆ ಸೀಮಿತವಾಗಿದ್ದ ಕಾಂಗ್ರೆಸ್ ಟಿಕೆಟ್ ಈ ಬಾರಿ ಶಫಿ ಕುಟುಂಬದಿಂದ ವಂಚಿತವಾಗಿರುವುದಕ್ಕೆ ಡಾ.ಜಿ.ಪರಮೇಶ್ವರ್ ಅವರೇ ನೇರ ಕಾರಣ ಎಂಬ ಆರೋಪ ಕೇಳಿಬಂದಿದೆ.
ವರಿಷ್ಠರ ನಡೆಯಿಂದ ಬೇಸರಗೊಂಡಿರುವ ಮಾಜಿ ಶಾಸಕ ಶಫಿ ಅಹಮದ್ ಇಂದು ಮಧ್ಯಾಹ್ನ ತಮ್ಮ ಬೆಂಬಲಿಗರ ಸಭೆ ನಡೆಸಲಿದ್ದು, ಸಭೆಯ ನಂತರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತೆರಳಿ, ಬೆಂಬಲಿಗರೊಂದಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಕೂತೂಹಲ ಮೂಡಿಸಿದ ನಡೆ: ಮಾಜಿ ಶಾಸಕ ಹಾಗೂ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶಫೀ ಅಹಮದ್ ನಡೆ ಕುತೂಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಗೆಲುವಿಗೆ ಅಡ್ಡಿಯಾಗಲಿದೆ ಎನ್ನುವ ಮಾತುಗಳು ಕೇಳಿಬಂದಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾರ್ಪೋರೇಟರ್, ಬೆಂಬಲಿಗರ ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದು, ವರಿಷ್ಠರ ತೀರ್ಮಾನದ ವಿರುದ್ಧ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡಿದ್ದು, ಸಭೆಗೆ ಬೆಂಬಲಿಗರನ್ನು ಕರೆಯಲಾಗಿದ್ದು, ಶಫೀ ಅಹಮದ್ ಅವರೊಂದಿಗೆ ಹಲವು ಮುಖಂಡರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.