ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೇಡಿಕೆಯನ್ನು ಹೈಕಮಾಂಡ್ ಒಪ್ಪಿದ್ದು, 2ನೇ ಬಾರಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ನಡೆಸಲಿದ್ದಾರೆ.
ಸೋನಿಯಾಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರ ಸಂಧಾನಕ್ಕೆ ಮಣಿದಿರುವ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯೊಂದಿಗೆ ಎರಡು ಪ್ರಮುಖ ಖಾತೆ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲು ಒಪ್ಪಿದ್ದಾರೆ ಎನ್ನಲಾಗಿದೆ.
ಸಿಎಂ ಗಾದಿ ಸಿದ್ದರಾಮಯ್ಯ ಅವರಿಗೆ ಫಿಕ್ಸ್ ಆಗುತ್ತಿದ್ದಂತೆಯೇ ರಾಜ್ಯದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದು, ಸಿದ್ದರಾಮಯ್ಯ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ನಡೆಸಿದ್ದಾರೆ.
ಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರಿಗೆ ಸಿಎಂ ಕಿರೀಟವನ್ನು ಇಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.