ಬೆಂಗಳೂರು: ಇಂದು ವಿಧಾನ ಸಭೆಯಲ್ಲಿ 2023-24ನೇ ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಈ ದೇಶದಲ್ಲಿ ಶತಶತಮಾನಗಳಿಂದ ಯಾವುದಾದರೊಂದು ನಾಡು ಶ್ರಮಿಸಿದ್ದರೆ ಅದು ಕರ್ನಾಟಕ ಎಂದು ಹೇಳಲು ನನಗೆ ಹೆಮ್ಮೆಯಿದೆ. ಬಸವಣ್ಣನವರಿಂದ ಹಿಡಿದು ನಾಲ್ವಡಿ ಕೃಷ್ಣರಾಜ ಒಡೆಯರ್‍ರವರೆಗೆ ಈ ನಮ್ಮ ನಾಡಿನಲ್ಲಿ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ತೇರನ್ನು ಜೊತೆಜೊತೆಗೇ ಎಳೆಯಲಾಗಿದೆ. ಈ ಘನ ಪರಂಪರೆಯನ್ನು ನಾನು ಎಂದಿನಂತೆ ಈ ಬಾರಿಯೂ ಮುಂದುವರೆಸಲು ಶ್ರಮಿಸಿದ್ದೇನೆ ಎಂದು ಹೇಳಿದರು.
ಇದೇ ವೇಳೆ ಅವರು ಅಂಬೇಡ್ಕರ್‍ರವರು ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದಲ್ಲಿ ನಂಬಿಕೆಯನ್ನು ಮರುಸ್ಥಾಪಿಸಲು ನಾವು ಬದ್ಧರಾಗಿದ್ದೇವೆ ಎಂದು ಪುನರುಚ್ಛರಿಸಿದರು.
ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯವನ್ನು ಪ್ರಜ್ಞಾಪೂರ್ವಕವಾಗಿಯೇ ʻಸರ್ವಜನಾಂಗದ ಶಾಂತಿಯ ತೋಟʼ ಎಂದು ಉಲ್ಲೇಖಿಸಿದ್ದೇವೆ. ಏಕೆಂದರೆ ನಮಗೆ ವೈವಿಧ್ಯತೆ, ಎಲ್ಲರ ಒಳಗೊಳ್ಳುವಿಕೆಯಲ್ಲಿ ವಿಶ್ವಾಸವಿದೆಯೇ ಹೊರತು ಸರ್ವಾಧಿಕಾರಿ ಮನೋಭಾವದಲ್ಲಲ್ಲ. ನಾವು ವಿಭಿನ್ನ ಚಿಂತನೆಗಳ ಒಗ್ಗೂಡಿಸುವಿಕೆ, ಭಯಮುಕ್ತ ವಾತಾವರಣದಲ್ಲಿ ಬದುಕುವುದು ಮತ್ತು ಪರಸ್ಪರ ಅವಲಂಬನೆಯೊಂದಿಗೆ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳ ಮೇಲೆ ಪರಿಣಾಮ ಬೀರುವ ತೀರ್ಮಾನಗಳನ್ನು ನ್ಯಾಯಯುತವಾಗಿ ಕೈಗೊಳ್ಳಲು ಬದ್ಧರಾಗಿದ್ದೇವೆ. ಭೇದ-ಭಾವ ತೋರುವುದು ಅಥವಾ ಧ್ರುವೀಕರಣ ಅಥವಾ ಸಮಾಜವನ್ನು ಒಡೆಯುವುದು ನ್ಯಾಯವಲ್ಲ. ನ್ಯಾಯವೆಂದರೆ ನಿಷ್ಪಕ್ಷಪಾತ, ನ್ಯಾಯವೆಂದರೆ ಸಹಾನುಭೂತಿ, ನ್ಯಾಯವೆಂದರೆ ಅವಕಾಶ ವಂಚಿತರಿಗೆ ಹೆಚ್ಚಿನ ಅನುಕೂಲ ಒದಗಿಸುವ ಮೂಲಕ ಆರ್ಥಿಕ ಅಸಮಾನತೆಯನ್ನು ನಿವಾರಿಸುವುದು.
ನಮ್ಮ ಸರ್ಕಾರವು ಬಡವರು, ದುರ್ಬಲ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಭೂ ರಹಿತ ಕೃಷಿ ಕಾರ್ಮಿಕರು ಮತ್ತು ಮಹಿಳೆಯರು ಸೇರಿದಂತೆ ಎಲ್ಲರಿಗೂ ಸಮಾನ ಅವಕಾಶ ಒದಗಿಸುವ ಮೂಲಕ ಎಲ್ಲರ ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸಲು ಬದ್ಧವಾಗಿದೆ. ನಾವು ಒಪ್ಪಂದ ಹಾಗೂ ಅನುಕೂಲಸಿಂಧು ರಾಜಕಾರಣವನ್ನು ಧಿಕ್ಕರಿಸಿ, ಸಂಪೂರ್ಣ ಬಹುಮತವನ್ನು ನೀಡಿರುವ ಶ್ರೀಸಾಮಾನ್ಯರ ತೀರ್ಮಾನವನ್ನು ತಲೆಬಾಗಿಸಿ ಸ್ವೀಕರಿಸುತ್ತೇವೆ. ಹಿಂದಿನ ಸರ್ಕಾರ ಗಣನೀಯವಾಗಿ ನೀಡಿರುವ ಕೊಡುಗೆಯಾದ ಭ್ರμÁ್ಟಚಾರವನ್ನು ಸಂಪೂರ್ಣವಾಗಿ ನಿಗ್ರಹಿಸಲು ನಮ್ಮ ಸರ್ಕಾರ ಶ್ರಮಿಸಲಿದೆ ಎಂದು ತಿಳಿಸಿದರು.