ಹಾವೇರಿ: ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರಜಾಧ್ವನಿ ಬಸ್ ಯಾತ್ರೆ ಇಂದು ನಗರಕ್ಕೆ ಆಗಮಿಸಲಿದೆ. ಪಕ್ಷದ ಸ್ಥಳೀಯ ನಾಯಕರು ಯಾತ್ರೆಯನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಸಮಾರಂಭ ಪ್ರಾರಂಭವಾಗಲಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ಬಸವರಾಜ ಶಿವಣ್ಣವರ, ರುದ್ರಪ್ಪ ಲಮಾಣಿ, ಅಜ್ಜಪೀರ ಖಾದ್ರಿ, ನಗರಸಭಾಧ್ಯಕ್ಷ ಸಂಜೀವ ಕುಮಾರ ನೀರಲಗಿ, ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ.
ಕಾಂಗ್ರೆಸ್‌ನ ಈ ಸಮಾವೇಶಕ್ಕೆ ಸ್ವಾಗತ ಕೋರುವ ಬ್ಯಾನರ್‌ಗಳು ನಗರದಾದ್ಯಂತ ರಾರಾಜಿಸುತ್ತಿವೆ. ಬುಧವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ಅನೇಕ ಸ್ಥಳೀಯ ನಾಯಕರು ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆಗಳನ್ನು ವೀಕ್ಷಿಸಿದರು. ನಂತರ ಮಾತಾನಾಡಿದ ಸಲೀಂ ಅಹ್ಮದ್, ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿರುವ ‘ಪ್ರಜಾಧ್ವನಿ’ ಬಸ್ ಯಾತ್ರೆಯು ಹಾವೇರಿಗೆ ಆಗಮಿಸಲಿರುವ ಹಿನ್ನಲೆಯಲ್ಲಿ ಬಹಿರಂಗ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ 50 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದರು