ತುಮಕೂರು: ಗ್ಯಾರೆಂಟಿ ಯೋಜನೆ ಜಾರಿ ವಿಚಾರದಲ್ಲಿ ಮಾಧ್ಯಮವರು ಯಾಕಿಷ್ಟು ಆತುರಪಡುತ್ತೀರಾ ಎಂದು ಸಚಿವ ಜಮೀರ್ ಅಹಮದ್ ಪ್ರಶ್ನಿಸಿದರು.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದು ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದು ಇನ್ನು 8-10 ದಿನಗಳಾಗಿವೆ ಅಷ್ಟೆ. ದಯವಿಟ್ಟು ತಾಳ್ಮೆಯಿಂದ ಇರಿ, ಶೀಘ್ರದಲ್ಲೇ ಜಾರಿಗೆ ಬರಲಿವೆ ಎಂದರು.
ಚುನಾವಣಾ ಪೂರ್ವದಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಈಗಾಗಲೇ ಮೊದಲ ಸಚಿವ ಸಂಪುಟದಲ್ಲೇ ಈ ಗ್ಯಾರೆಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಿದ್ದೇವೆ. ಆದಷ್ಟು ಬೇಗ ಮುಖ್ಯಮಂತ್ರಿಗಳು ಈ ಗ್ಯಾರೆಂಟಿಗಳನ್ನು ಜಾರಿ ಮಾಡುತ್ತೇವೆ ಎಂದರು.
ಸಿದ್ದಗಂಗಾ ಮಠದಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಬಿಜೆಪಿ ಸರ್ಕಾರ 10 ಕೋಟಿ ರೂ. ಹಣ ಬಿಡುಗಡೆ ಮಾಡಿತ್ತು. ಈ ಆದೇಶವನ್ನು ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆಯಲ್ಲ ಎಂಬ ಪ್ರಶ್ನೆಗೆ ಈ ಬಗ್ಗೆ ನನ್ನ ಜತೆ ಶ್ರೀಗಳು ಚರ್ಚಿಸಿಲ್ಲ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಅಗತ್ಯ ಕಟ್ಟಡ ವ್ಯವಸ್ಥೆಗೆ ಸಹಕಾರ ನೀಡುವುದಾಗಿ ಅವರು ತಿಳಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವೀದ್ ಕರಂಗಿ, ಎಇಇ ಮಹಲಿಂಗಪ್ಪ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಅಲೀಮ್ ಮತ್ತಿತರರು ಉಪಸ್ಥಿತರಿದ್ದರು.