ಹಾವೇರಿ: ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಹಾಸಂಸ್ಥಾನದ ಶ್ರೀ ಕ್ಷೇತ್ರ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಫೆ.9 ಹಾಗೂ 10 ರಂದು ಜಿಲ್ಲೆಯ ಬ್ಯಾಡಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಮಹಿಳಾ ಸ್ವ- ಸಹಾಯ ಸಂಘಗಳ ಸಮಾವೇಶ, ಕೃಷಿ ಮೇಳ ಹಾಗೂ ಬಸವೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪುಷ್ಪಗಿರಿ ಮಠದ ಸೋಮಶೇಖರ ಶಿವಾಚಾರ್ಯ ಶ್ರೀ ಹೇಳಿದರು.
ನಗರದ ಮಾತನಾಡಿದ ಅವರು, ಶ್ರೀ ಕ್ಷೇತ್ರ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ರಾಜ್ಯದ ಹಾಸನ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಶಿವಮೊಗ್ಗ, ಕೊಪ್ಪಳ ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳಲ್ಲಿ ಕಾರ್ಯಾರಂಭಿಸಿ ಎರಡು ವರ್ಷ ಪೂರೈಸಿದೆ. ಜಿಲ್ಲೆಯಲ್ಲಿ ಸಂಸ್ಥೆ ಪ್ರಾರಂಭವಾಗಿ ವರ್ಷದೊಳಗೆ ಸಾವಿರಾರು ಸ್ವ-ಸಹಾಯ ಸಂಘಗಳು ಆರಂಭವಾಗಿವೆ. ಮಹಿಳೆಯರ ಸ್ವಾವಲಂಬಿ ಜೀವನ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ₹ 50 ಸಾವಿರದಿಂದ ₹ 1 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದರು.
ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಸ್ವ-ಸಹಾಯ ಸಂಘಗಳ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಉತ್ತೇಜನ ನೀಡುತ್ತಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಜನಪರ ಕೆಲಸ ಮಾಡುತ್ತಿರುವ ಈ ಸಂಸ್ಥೆ ಮೂರನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಅತ್ತಿಕಟ್ಟಿ ಶಾಖಾ ಮಠದಲ್ಲಿ ಮಹಿಳಾ ಸಮಾವೇಶ ಹಾಗೂ ಕೃಷಿ ಮೇಳ ಆಯೋಜಿಸಲಾಗಿದೆ. ಈ ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವರು, ಕೃಷಿ ವಿಶ್ವ ವಿದ್ಯಾಲಯದ ಕುಲಪತಿಗಳು, ನಿಗಮ ಮಂಡಳಿಯ ಅಧ್ಯಕ್ಷರು, ಮಾಜಿ ಶಾಸಕರು ಸೇರಿದಂತೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಹೋತನಹಳ್ಳಿ ಸಿದ್ಧಾರೂಢ ಮಠದ ಶಂಕರಾನಂದ ಶ್ರೀ, ಯಳವಟ್ಟಿ ಸಿದ್ಧಾಶ್ರಮದ ಯೋಗಾನಂದ ಶ್ರೀ, ಮಾರುತಿ ಕೆಂಪಗೌಡ್ರ, ಸುರೇಶ ಮೆಣಸಿನಹಾಳ, ನಿಂಗರಾಜ ಕಮ್ಮಾರ, ನಾಗಯ್ಯ ಶಡರವಳ್ಳಿ, ಶಿವನಗೌಡ್ರ ದೊಡ್ಡಗೌಡ್ರ ಇತರರು ಇದ್ದರು.